ಈ ಬಾರಿ ಸಂಸತ್ ಬಜೆಟ್ ಅಧಿವೇಶನ ಜನವರಿ 31 ರಿಂದ ಪ್ರಾರಂಭವಾಗಿ ಏಪ್ರಿಲ್ 6 ರಂದು ಮುಕ್ತಾಯವಾಗುವ ಸಾಧ್ಯತೆಯಿದೆ. ಈ ಬಗ್ಗೆ ಸರ್ಕಾರ ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ನೀಡುವ ನಿರೀಕ್ಷೆ ಇದೆ.ಕೇಂದ್ರ ಬಜೆಟ್ 2023-24 ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು ಸಂಸತ್ತಿನಲ್ಲಿ ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನದ ಮೊದಲ ಭಾಗ ಫೆಬ್ರವರಿ 10 ರವರೆಗೆ ಮುಂದುವರಿಯುವ ನಿರೀಕ್ಷೆಯಿದೆ. ಬಜೆಟ್ ಅಧಿವೇಶನದ ಮೊದಲ ದಿನ ಸಂಸತ್ತಿನ ಉಭಯ ಸದನದಲ್ಲಿ ಆರ್ಥಿಕ ಸಮೀಕ್ಷೆಯನ್ನೂ ಮಂಡಿಸುವ ಸಾಧ್ಯತೆಯಿದೆ. ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡಿ, ಅಧಿವೇಶನವನ್ನು ಪ್ರಾರಂಭಿಸುವ ನಿರೀಕ್ಷೆಯಿದೆ. ಪ್ರತಿ ವರ್ಷ ಕೇಂದ್ರ ಬಜೆಟ್ ಅನ್ನು ಅಧಿವೇಶನಗಳಲ್ಲಿ ಮಂಡಿಸಲಾಗುತ್ತದೆ. ವರದಿಯ ಪ್ರಕಾರ, ಅಧಿವೇಶನದ 2ನೇ ಭಾಗವು ಮಾರ್ಚ್ 6 ರಂದು ಪ್ರಾರಂಭವಾಗಿ ಏಪ್ರಿಲ್ 6ಕ್ಕೆ ಕೊನೆಗೊಳ್ಳುವ ಸಾಧ್ಯತೆಯಿದೆ.