ಉಪ ಸಭಾಧ್ಯಕ್ಷರ ವಿಷಯದಲ್ಲಿ ದಲಿತ ಕಾರ್ಡ್ ಬಿಟ್ಟ ಕಾಂಗ್ರೆಸ್ ಪಕ್ಷಕ್ಕೆ ತಿರುಗೇಟು ಕೊಟ್ಟಿರುವ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ದಲಿತರ ಬಗ್ಗೆ ಇಷ್ಟು ಪ್ರೇಮ ತೋರಿಸುವ ಕಾಂಗ್ರೆಸ್ ಈಗಲಾದರೂ ದಲಿತ ಮುಖ್ಯಮಂತ್ರಿಯನ್ನು ಮಾಡಲಿ ಎಂದು ಸವಾಲು ಹಾಕಿದರು. ಉಪ ಸಭಾಧ್ಯಕ್ಷರು ದಲಿತರೆನ್ನುವ ಟ್ರಂಪ್ ಕಾರ್ಡ್ ತೇಲಿಬಿಟ್ಟಿದೆ ಸರ್ಕಾರ. ದಲಿತರೆನ್ನುವ ಕಾರಣಕ್ಕೆ ಉಪ ಸಭಾಧ್ಯಕ್ಷರ ಮೇಲೆ ಅನುಕಂಪದ ಹೊಳೆ ಹರಿಸುವ ಕಾಂಗ್ರೆಸ್, ಅವರಿಗೆ ಸಚಿವ ಸ್ಥಾನವನ್ನೇ ನೀಡಬಹುದಿತ್ತು. ನೀಡಲಿಲ್ಲ ಯಾಕೆ? ಶಾಸಕ ಪುಟ್ಟರಂಗಶೆಟ್ಟಿ ಅವರು ಬೇಡವೇ ಬೇಡ ಎಂದ ಹುದ್ದೆಯನ್ನು ರುದ್ರಪ್ಪ ಲಮಾಣಿ ಅವರ ತಲೆಗೆ ಕಟ್ಟಿದ್ದು ಯಾಕೆ? ಇಂಥ ಅತಿಯಾದ ಜಾಣತನ, ಭಂಡತನ ಯಾಕೆ? ಸಂಪುಟ ರಚನೆ ವೇಳೆ ರುದ್ರಪ್ಪ ಲಮಾಣಿ ಅವರು ದಲಿತರೆನ್ನುವುದು ಕಾಂಗ್ರೆಸ್ಗೆ ಗೊತ್ತಿರಲಿಲ್ಲವೇ? ದಲಿತ ಕಾರ್ಡ್ ಬಿಟ್ಟ ಪ್ರಿಯಾಂಕ್ ಖರ್ಗೆ ಅಥವಾ ಕೃಷ್ಣ ಭೈರೇಗೌಡರಿಗೆ ಅಷ್ಟು ದಲಿತ ಪ್ರೇಮ ಇದ್ದರೆ ಅವರ ಸಚಿವಗಿರಿಯನ್ನು ಲಮಾಣಿ ಅವರಿಗೇ ಬಿಟ್ಟುಕೊಟ್ಟು ಈ ಇಬ್ಬರಲ್ಲಿ ಒಬ್ಬರು ಉಪ ಸಭಾಧ್ಯಕ್ಷರಾಗಲಿ.ದಲಿತ ಮುಖ್ಯಮಂತ್ರಿ ಕೂಗು ಕಾಂಗ್ರೆಸ್ ಪಕ್ಷದಲ್ಲಿ ಬಹಳ ದಿನಗಳಿಂದ ಇದೆ. ಹಿಂದೆ ಖರ್ಗೆ ಅವರಿಗೆ ಸಿಎಂ ಹುದ್ದೆ ಕೈ ತಪ್ಪುವಂತೆ ಮಾಡಲಾಗಿತ್ತು. ಈಗ ದಲಿತ ಮುಖ್ಯಮಂತ್ರಿ ಮಾಡಲು ಇದೇ ಸಕಾಲ. ದಲಿತರನ್ನೇ ಸಿಎಂ ಮಾಡಲಿ. ನುಡಿದಂತೆ ನಡೆಯುವ ಪಕ್ಷಕ್ಕೆ ಇದು ಅಸಾಧ್ಯವೇನಲ್ಲ. ಅಲ್ಲವೇ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.