ಗುರುವಾರ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಿತ್ತೂರು ಮತ್ತು ಕಲ್ಯಾಣ ಕರ್ನಾಟಕ ಭಾಗಕ್ಕೆ ಐದು ಸಾವಿರ ಕೋಟಿ ರು.ಗಳಿಗೂ ಅಧಿಕ ಮೊತ್ತದ 13 ಅತ್ಯಂತ ಪ್ರಮುಖ ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡುವ ಮೂಲಕ ಉತ್ತರ ಕರ್ನಾಟಕಕ್ಕೆ ಸರ್ಕಾರ ಬಂಪರ್‌ಕೊಡುಗೆ ನೀಡಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ಮತ್ತು ಬೀಳಗಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಗಲಗಲಿ ಗ್ರಾಮದ ಹತ್ತಿರ ಕೃಷ್ಣಾ ನದಿಯಿಂದ ನೀರನ್ನು 3,535 ಹೆಕ್ಟೇರ್‌ಭೂಮಿಗೆ ಹರಿಸಲು ಹಾಗೂ ಐದು ಕೆರೆಗಳನ್ನು ತುಂಬಿಸುವ ಮೆಳ್ಳಿಗೇರಿ-ಹಲಗಲಿ ಏತ ನೀರಾವರಿ ಯೋಜನೆಯನ್ನು 197 ಕೋಟಿ ರು. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ.ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನೀರಾವರಿ ವಂಚಿತ 9950 ಹೆಕ್ಟೇರ್‌ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ಮತ್ತು 17 ಕೆರೆಗಳನ್ನು ತುಂಬಿಸುವ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಯನ್ನು 1486.41 ಕೋಟಿ ರು ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದೆ. ಅರಭಾವಿ ಕ್ಷೇತ್ರದ ವ್ಯಾಪ್ತಿಯಲ್ಲಿ 20 ಕೆರೆಗಳಿಗೆ ಘಟಪ್ರಭಾ ನದಿಯಿಂದ ನೀರು ತುಂಬಿಸುವ ಯೋಜನೆಯನ್ನು 323.87 ಕೋಟಿ ರು. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ.