ಟರ್ಕಿಯ ಇಸ್ತಾಂಬುಲ್‌ನಲ್ಲಿ ಭಾನುವಾರ ನಡೆದ ಭೀಕರ ಸ್ಫೋಟದಲ್ಲಿ 6 ಜನರು ಸಾವನ್ನಪ್ಪಿದ್ದಾರೆ. 81 ಜನರು ಗಾಯಗೊಂಡಿದ್ದಾರೆ. ಇದೀಗ ಸ್ಫೋಟಕ್ಕೆ ಸಂಬಂಧಿಸಿದಂತೆ ಶಂಕಿತನನ್ನು ಪೊಲೀಸರು ಬಂಧಿಸಿದ್ದು, ದಾಳಿಯ ಹಿಂದಿನ ಉದ್ದೇಶ ಹಾಗೂ ಕೃತ್ಯದ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯ ಬಗ್ಗೆ ಭಯೋತ್ಪಾದನೆಯ ಶಂಕೆ ವ್ಯಕ್ತವಾಗಿದೆ. ಘಟನಾ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಟರ್ಕಿಯ ಆಂತರಿಕ ಸಚಿವ ಸುಲೇಮಾನ್ ಸೊಯ್ಲು ತಿಳಿಸಿದ್ದಾರೆ.