ದೆಹಲಿ ಕರ್ನಾಟಕ ಸಂಘ 75 ವರ್ಷ ಪೂರ್ಣಗೊಂಡಿರುವ ಹಿನ್ನೆಲೆ ಫೆ. 25, 26ರಂದು ಅಮೃತ್ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಫೆ. 25ರಂದು ಪ್ರಧಾನಿ ಮೋದಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಸಿ.ಎಂ ನಾಗರಾಜ್ ತಿಳಿಸಿದರು. ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೆಹಲಿಯ ತಾಲ್ಕಟೋರ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಕಾರ್ಯಕ್ರಮ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ನಡೆಯಲಿದೆ. 10-12 ಸಾವಿರ ಕನ್ನಡಿಗರು ಎರಡು ದಿನಗಳ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಸಂಘಕ್ಕೆ ದುಡಿದ 75 ಗಣ್ಯರಿಗೆ ಗೌರವಿಸುವ ಕೆಲಸ ಮಾಡಲಿದ್ದೇವೆ. 1,200 ಕಲಾವಿದರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿಸಲಾಗಿದೆ ಎಂದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದನಾಥ ಶ್ರೀಗಳು, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಶ್ರೀಗಳು, ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಗಳು, ನಂಜಾವಧೂತ ಶ್ರೀಗಳು ಹಾಗು ಮೈಸೂರು ಮಹಾರಾಜ ಯದುವೀರ ಒಡೆಯರ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವಿಜಯ್ ಪ್ರಕಾಶ್ ಅವರ ತಂಡದಿಂದ ಸಂಗೀತೋತ್ಸವ ಹಾಗೂ ಕಾಮಿಡಿ ಕಿಲಾಡಿಗಳಿಂದ ಹಾಸ್ಯಸಂಜೆ ಆಯೋಜಿಸಲಾಗಿದೆ ಎಂದು ವಿವರಿಸಿದರು.