ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಪ್ರತಿಪಕ್ಷಗಳು ಟೀಕೆ ಮಾಡುತ್ತಿವೆ. ಹಿಂದಿನ ಸರ್ಕಾರದ ಅವಧಿಯಲ್ಲಿ (2013-18) ನಾವು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಇದೇ ಭರವಸೆಯಲ್ಲಿ ಜನರು ನಮಗೆ ಪೂರ್ಣ ಬಹುಮತ ನೀಡಿದ್ದು, ಎರಡನೇ ಸಚಿವ ಸಂಪುಟ ಸಭೆಯಲ್ಲೇ ಐದೂ ಗ್ಯಾರಂಟಿ ಯೋಜನೆ ಅನುಷ್ಠಾನ ನಿರ್ಧಾರ ಮಾಡಿದ್ದೇವೆ. ನಮ್ಮ ಸರ್ಕಾರವು ನುಡಿದಂತೆ ನಡೆದುಕೊಂಡಿದೆ. ಕೊಟ್ಟಮಾತಿನಂತೆ ನಡೆದುಕೊಳ್ಳದ ಬಿಜೆಪಿಯವರಿಗೆ ನಮ್ಮ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ. ನಮ್ಮ ಬಗ್ಗೆ ಮಾತನಾಡುವ ರಾಜ್ಯ ಬಿಜೆಪಿ ನಾಯಕರು 2018ರ ಪ್ರಣಾಳಿಕೆಯಲ್ಲಿ ನೀಡಿದ್ದ 600 ಭರವಸೆಗಳಲ್ಲಿ ಎಷ್ಟುಈಡೇರಿಸಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರು. ಹಾಕಿದ್ದಾರೆಯೇ? ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡಿದ್ದಾರೆಯೇ? ಪೆಟ್ರೋಲ್- ಡೀಸೆಲ್‌ಬೆಲೆ ಇಳಿಕೆ ಮಾಡಿದ್ದಾರೆಯೇ? ಇವುಗಳ ಬಗ್ಗೆ ಮೊದಲು ಉತ್ತರ ನೀಡಲಿ ಎಂದು ಸವಾಲು ಹಾಕಿದರು.