ಬೆಂಗಳೂರಿನಲ್ಲಿ ಅಕ್ರಮವಾಗಿ ಹಾಕಲಾಗಿರುವ ಜಾಹೀರಾತು ಫಲಕ/ ಹೋರ್ಡಿಂಗ್‌ಗಳ ತೆರವು ಮಾಡುವ ಕುರಿತು ಕರ್ನಾಟಕ ಹೈಕೋರ್ಟ್ ಮತ್ತೆ ಬಿಬಿಎಂಪಿ ವಿರುದ್ಧ ಹರಿಹಾಯ್ದಿದೆ.ಹೊಸದಾಗಿ ಜಾಹೀರಾತು ಅಳವಡಿಸಿರುವುದಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮದ ವರದಿ ಸಲ್ಲಿಸುವಂತೆ ಗುರುವಾರ ಹೈಕೋರ್ಟ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ನಿರ್ದೇಶಿಸಿದೆ. ಜತೆಗೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸದಿದ್ದರೆ ತಾನೇ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತು ಫಲಕಗಳ ಅಳವಡಿಕೆಯನ್ನು ಆಕ್ಷೇಪಿಸಿ ಬೆಂಗಳೂರಿನ ಮಾಯಿಗೇಗೌಡ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.