ರಾಜ್ಯ ಸರ್ಕಾರದಿಂದ 7ನೇ ವೇತನ ಆಯೋಗ ಜಾರಿ ಹಾಗೂ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸುವಂತೆ ಆಗ್ರಹಿಸಿ ಸರ್ಕಾರದ ಬಹುತೇಕ ಇಲಾಖೆಗಳ ನೌಕರರು ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿಗೆ ಸಹ ಸರ್ಕಾರಿ ನೌಕರರು ಸ್ಪಂದಿಸಿಲ್ಲ. ಕರ್ನಾಟಕದ ಸರ್ಕಾರಿ ನೌಕರರು ಮಾರ್ಚ್ 1ರ ಬುಧವಾರದಿಂದ ಉದ್ಯೋಗಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುವುದಾಗಿ ಹೇಳಿದ್ದಾರೆ. ಇದರಿಂದಾಗಿ ಸರ್ಕಾರಿ ಕಚೇರಿಗಳಲ್ಲಿ ಕೆಲಸಗಳು ನಡೆಯದೇ ಜನರು ಪರದಾಟ ನಡೆಸುವ ಸಾಧ್ಯತೆ ಇದೆ. ರಾಜ್ಯ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನಲೆಯಲ್ಲಿ ವಿವಿಧ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಆದರೆ ಬೆಂಗಳೂರು ನಗರದಲ್ಲಿ ಕಾವೇರಿ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವುದಿಲ್ಲ ಬುಧವಾರ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಈಗಾಗಲೇ ಸೂಚನೆ ನೀಡಿದೆ ಎಂದು ಬೆಂಗಳೂರು ಜಲಮಂಡಳಿ ಹೇಳಿದೆ. ಸರ್ಕಾರಿ ನೌಕರರ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿಗಳು ಹುಬ್ಬಳ್ಳಿಯಲ್ಲಿ ಮಂಗಳವಾರ ಹೇಳಿದ್ದಾರೆ.