ಮುಂಬರುವ 2024ರ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರನ್ನು ಬದಲಾಯಿಸಲಾಗಿದೆ. ತೆಲಂಗಾಣದಲ್ಲಿ ಬಂಡಿ ಸಂಜಯ್ ಕುಮಾರ್ ಬದಲು ಇನ್ನು ಮುಂದೆ ಜಿ ಕಿಶನ್ ರೆಡ್ಡಿ ಪಕ್ಷವನ್ನು ಮುನ್ನಡೆಸಲಿದ್ದಾರೆ. ತೆಲುಗು ದೇಶಂ ಪಕ್ಷದ ಸಂಸ್ಥಾಪಕ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್‌ಟಿ ರಾಮರಾವ್ ಅವರ ಪುತ್ರಿ ದಗ್ಗುಬಾಟಿ ಪುರಂದೇಶ್ವರಿ ಅವರನ್ನು ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಕಳೆದ ವರ್ಷ ಮೇ ತಿಂಗಳಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದಿರುವ ಸುನೀಲ್ ಕುಮಾರ್ ಜಾಖರ್ ಅವರು ಪಂಜಾಬ್‌ನಲ್ಲಿ ಪಕ್ಷವನ್ನು ಮುನ್ನಡೆಸಲಿದ್ದಾರೆ. ಜಾರ್ಖಂಡ್ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಬಾಬುಲಾಲ್ ಮರಾಂಡಿ ಅವರು ಜಾರ್ಖಂಡ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಎಲ್ಲಾ ರಾಜ್ಯ ಅಧ್ಯಕ್ಷರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯ ಉಸ್ತುವಾರಿಗಳ ಸಭೆಯನ್ನು ಬಿಜೆಪಿ ಜುಲೈ 7 ರಂದು ಕರೆದಿದೆ. ಈ ಸಭೆಯ ಅಧ್ಯಕ್ಷತೆಯನ್ನು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ವಹಿಸಲಿದ್ದಾರೆ. ರಾಜ್ಯದಲ್ಲಿ ಕೂಡ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಈ ಹಿಂದೆಯೇ ಕೇಳಿಬಂದಿತ್ತು. ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಶೋಭಾ ಕರಂದ್ಲಾಜೆ ಹೆಸರು, ಆದರೆ ಕರ್ನಾಟಕದ ರಾಜ್ಯಾಧ್ಯಕ್ಷರ ಬದಲಾವಣೆಯಾಗಿಲ್ಲ.