ರಾಜ್ಯಕ್ಕೆ ಬರ ಪರಿಹಾರ ನೀಡುವಂತೆ 5 ತಿಂಗಳು ಕಾದರೂ ಪರಿಹಾರ ಕೊಡದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.ರಾಜ್ಯಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಬಾಗಿಲು ಬಡಿದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗೃಹ ಕಚೇರಿ ಕೃಷ್ಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರದಿಂದ ನಮ್ಮ ಪಾಲಿನ ಪರಿಹಾರ ಬರುತ್ತದೆ ಎಂದು ಕಾದು ಕಾದು ಸಾಕಾಗಿ ಸುಪ್ರೀಂಕೋರ್ಟ್ ಮೊರೆ ಹೋದೆವು. ಸಂವಿಧಾನದ ಪರಿಚ್ಛೇದ 32 ರ ಅಡಿಯಲ್ಲಿ ನಾವು ನಮ್ಮ ಕಾನೂನುಬದ್ದ ಹಕ್ಕನ್ನು ಚಲಾಯಿಸಿದ್ದೇವೆ. ಬರದ ಸಂದರ್ಭದಲ್ಲಿ , ತುರ್ತು ಸಂದರ್ಭಗಳಲ್ಲಿ ಜನರಿಗೆ ತುರ್ತಾಗೆ ಸ್ಪಂದಿಸದ ಬೇಕು ಎನ್ನುವ ಉದ್ದೇಶದಿಂದಲೇ ವಿಪತ್ತು ನಿರ್ವಹಣಾ ಕಾನೂನು ಮಾಡಲಾಗಿದೆ ಆದರೆ ಇದುವರೆಗೂ ಕೇಂದ್ರ ಕಾನೂನು ಬದ್ದವಾಗಿ ನಮಗೆ ಬರಬೇಕಾದ ಹಣದಲ್ಲಿ ಒಂದೇ ಒಂದು ಪೈಸೆಯನ್ನೂ ಕೊಟ್ಟಿಲ್ಲ. ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೇವೆ. ರಾಜ್ಯದಲ್ಲಿ 240 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳನ್ನು ಬರಗಾಲ ಅಂತ ಘೋಷಿಸಿದ್ದೇವೆ. ನಾಲ್ಕು ಬಾರಿ ಮೌಲ್ಯಮಾಪನ ಮಾಡಿದ್ದೇವೆ. 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆ ನಷ್ಟ ಆಗಿದೆ. 3 ಬಾರಿ ಸತತವಾಗಿ ಕೇಂದ್ರಕ್ಕೆ ಮನವಿ ಪತ್ರ ಬರೆದೆವು. ಇದುವರೆಗೂ ಕೇಂದ್ರ ಸರ್ಕಾರ ರಾಜ್ಯದ ಪಾಲಿನಲ್ಲಿ ನಯಾ ಪೈಸೆಯನ್ನೂ ಕೊಟ್ಟಿಲ್ಲ’ ಎಂದು ಮಾಹಿತಿ ನೀಡಿದರು.